ಪಾದಯಾತ್ರೆ ಕೈ ಬಿಡಲು ಕೋರಿ ಸಿಎಂ ಬೊಮ್ಮಾಯಿ ಪತ್ರ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ನಡೆಸುತ್ತಿರುವ ಪಾದಯಾತ್ರೆಯನ್ನು ಕೈ ಬಿಡಲು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಕೊರೊನಾ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸುತ್ತಿದೆ. ಈ ವೇಳೆ ಸಾವಿರಾರು ಜನರನ್ನು ಸೇರಿಸಿ ಪಾದಯಾತ್ರೆ ನಡೆಸುವುದು ಸೂಕ್ತವಲ್ಲ. ಇದು ಸಾಮಾಜಿಕ ಜನ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈಗಾಗಲೇ ಹೈಕೋರ್ಟ್​ ಕೂಡ ಪಾದಯಾತ್ರೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಹೀಗಾಗಿ ಪಾದಯಾತ್ರೆ ನಿಲ್ಲಿಸಿ ಎಂದು ಪತ್ರದಲ್ಲಿ ಸಿಎಂ ಬೊಮ್ಮಾಯಿ ಕೋರಿದ್ದಾರೆ.

ಪ್ರಸ್ತುತ ಕೊರೊನಾ ಸೋಂಕು ಎದುರಿಸಬೇಕಾದ ಅಗತ್ಯವಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಯೋಜನೆಯ ಸಾಕಾರಕ್ಕೆ ಶ್ರಮಿಸೋಣ ಎಂದು ತಿಳಿಸಿದ್ದಾರೆ.