ಅಯೋಧ್ಯೆಯಿಂದ ಕಣಕ್ಕಿಳಿಯಲಿದ್ದಾರೆ ಯೋಗಿ​

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಮುಂದಿನ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅದಕ್ಕಾಗಿ ಕಾಂಗ್ರೆಸ್​ ಈಗಾಗಲೇ 125 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, ಇದೀಗ ಬಿಜೆಪಿ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ತವಕದಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಬೆಳಗ್ಗೆ ಮಹತ್ವದ ಸಭೆ ನಡೆದಿದ್ದು, ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಯೋಧ್ಯೆಯಿಂದ ಕಣಕ್ಕಿಳಿಯುವುದು ಬಹುತೇಕ ಖಚಿತಗೊಂಡಿದೆ. ಮಥುರಾದಿಂದ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೂಡ ಈ ವೇಳೆ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯೋಗಿ ಆದಿತ್ಯನಾಥ್ ತಮ್ಮ ರಾಜಕೀಯ ಇತಿಹಾಸದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿಲ್ಲ. ಆದರೆ, ಗೋರಖ್​ಪುರ್​​ ಲೋಕಸಭೆಯಿಂದ 5 ಸಲ ಸಂಸದರಾಗಿರುವ ಅವರು, ಸದ್ಯ ವಿಧಾನ ಪರಿಷತ್ ಸದಸ್ಯರಾಗಿ, ಮುಖ್ಯಮಂತ್ರಿಯಾಗಿದ್ದಾರೆ.

ಇಂದಿನ ಸಭೆಯಲ್ಲಿ ಬಿಜೆಪಿ 172 ಕ್ಷೇತ್ರಗಳ ಅಭ್ಯರ್ಥಿಗಳನ್ನು ಫೈನಲ್​ ಮಾಡಿದ್ದು, ಕೆಲ ಗಂಟೆಗಳಲ್ಲಿ ಮೊದಲ ಪಟ್ಟಿ​ ಪ್ರಕಟಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರ್ಮ ಸಿಂಗ್ ಸೈನಿ ಸೇರಿದಂತೆ ಅನೇಕ ಪ್ರಮುಖ ನಾಯಕರು ಸಮಾಜವಾದಿ ಪಕ್ಷ ಸೇರುತ್ತಿದ್ದು, ಆಡಳಿತ ಪಕ್ಷಕ್ಕೆ ಭಾರಿ ಹೊಡೆತ ನೀಡಿದೆ.

2017ರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದಾಖಲೆಯ 312 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ, ಸರ್ಕಾರ ರಚನೆ ಮಾಡಿತ್ತು.